ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ; ದ್ವೀಪದಂತಾದ ಕುಕ್ಕೆ ಸುಬ್ರಹ್ಮಣ್ಯ, ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ
ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಮುಂದಿನ 24 ಗಂಟೆಗಳ ಅವಧಿಯಲ್ಲಿ ನಿರಂತರವಾಗಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳ ಜಿಲ್ಲಾಡಳಿತಗಳಿಗೆ ತುರ್ತು ಮುನ್ನೆಚ್ಚರಿಕೆ ಸಂದೇಶ ರವಾನಿಸಿದೆ. ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಗುರುವಾರ ಮುಂಜಾನೆಯಿಂದಲೇ ಮಳೆ ಸುರಿಯುತ್ತಿದೆ. ಕೆಲವೆಡೆ ಗಾಳಿ, ಮಳೆಯಾಗುತ್ತಿದೆ.
ಈ ನಡುವೆ ನೇತ್ರಾವತಿ, ಕುಮಾರಧಾರಾ ನದಿಗಳು ಅಪಾಯ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಸುಳ್ಯ, ಸುಬ್ರಹ್ಮಣ್ಯ, ಕುಲ್ಕುಂದ, ಕುದುರೆಮಜಲು, ನೂಜಿಲ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಕುದುರೆಮಜಲಿನಲ್ಲಿ 15ಕ್ಕೂ ಹೆಚ್ಚು ಮನೆಗಳು ಮುಳುಗಡೆಯಾಗಿದ್ದು, ತಡರಾತ್ರಿ ಸಂಕಷ್ಟದಲ್ಲಿದ್ದ ಕುಟಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ .
ಉಕ್ಕಿ ಹರಿಯುತ್ತಿವೆ ನದಿಗಳು: ಅಪಾಯದ ಮಟ್ಟ ಮೀರಿ ನೇತ್ರಾವತಿ ನದಿ ಹರಿಯುತ್ತಿದ್ದು 8.6ಮೀಟರ್ ಎತ್ತರದಲ್ಲಿ ನೇತ್ರಾವತಿ ನದಿ ನೀರಿನ ಮಟ್ಟ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಂಟ್ವಾಳ ಹಲವು ಪ್ರದೇಶಗಳು ಮುಳುಗಡೆಯಾಗುವ ಭೀತಿ ಎದುರಾಗಿದೆ. ನೇತ್ರಾವತಿ ನದಿ ತಟದ ಗ್ರಾಮಗಳು ಜಲಾವೃತಗೊಂಡಿದ್ದು ಸಂತ್ರಸ್ತರನ್ನು ಸುರಕ್ಷಿತ ಪ್ರದೇಶಗಳಿಗೆ ರವಾನಿಸಲಾಗಿದೆ.
Leave A Reply