ಮಲೇರಿಯ ನಿಯಂತ್ರಣ ಕಾರ್ಯಾಗಾರ: ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮ
ಆರೋಗ್ಯಕರ ಸಮಾಜ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿ: ಡಾ.ಕುಮಾರ್
ಮಂಗಳೂರು: ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಲೇರಿಯಾ ನಿಯಂತ್ರಣ ಬಗ್ಗೆ ಪತ್ರಕರ್ತರಿಗೆ ಮಾಹಿತಿ ಕಾರ್ಯಾಗಾರ ಮತ್ತು ಸಂವಾದ ಜೂನ್ 29ರಂದು ನಗರದ ಪತ್ರಿಕಾಭವನದಲ್ಲಿ ನಡೆಯಿತು
ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ದ.ಕ. ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಆರೋಗ್ಯಕರ ಸಮಾಜ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಪ್ರಸ್ತುತ ಕೊರೋನಾದ ನಡುವೆ ಮಲೇರಿಯಾ ಡೆಂಗ್ಯೂವಿನ ಭೀತಿ ಉಂಟಾಗಿದೆ. ಜನತೆ ಈ ಬಗ್ಗೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು. ಕಳೆದ ಎರಡು ವರ್ಷಗಳಿಂದ ಈ ಪ್ರಕರಣಗಳು ಇಳಿಮುಖವಾಗುತ್ತಿರುವುದು ಸಮಾಧಾನದ ಸಂಗತಿ ಎಂದರು.
ಪ್ರತಿಯೊಬ್ಬರೂ ಸ್ವಚ್ಛತೆಗೆ ಆದ್ಯತೆ ನೀಡಿದಾಗ ಸಾಂಕ್ರಾಮಿಕ ರೋಗಗಳನ್ನು ತಡೆಯಲು ಸಾಧ್ಯವಾಗುತ್ತದೆ. ನಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ನಮ್ಮ ಕೈಯಲ್ಲೇ ಇದೆ ಎಂದರು. ಕಾರ್ಯಾಗಾರ ನಡೆಸಿಕೊಟ್ಟ
ರೋಗವಾಹ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ನವೀನ್‌ಚಂದ್ರ ಕುಲಾಲ್
ಮಳೆಗಾಲ ಆರಂಭವಾಗುತ್ತಿದ್ದಂತೆ ಮಲೇರಿಯಾ, ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಳ್ಳುತ್ತಿದ್ದು, ಸಾರ್ವಜನಿಕರು ಸ್ವಚ್ಛತೆಗೆ ವಿಶೇಷ ಒತ್ತು ನೀಡಬೇಕು. ಮನೆಯ ಪರಿಸರದಲ್ಲಿ ನೀರು ನಿಲ್ಲದಂತೆ ಎಚ್ಚರವಹಿಸಬೇಕು ಎಂದು ಹೇಳಿದರು.
ಯಾವುದೇ ಜ್ವರ ಬರಲಿ, ಮಲೇರಿಯ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು. ನಿಂತಿರುವ ನೀರಿನಿಂದಲೇ ಡೆಂಗ್ಯೂ, ಮಲೇರಿಯಾ ಸೊಳ್ಳೆಗಳ ಉತ್ಪತ್ತಿಯಾಗುತ್ತಿದ್ದು, ಇದರ ಬಗ್ಗೆ ಜಾಗರೂಕರಾಗಿರಬೇಕು. ಜ್ವರ, ಮೈ ಕೈ ನೋವು, ಕೀಲು ನೋವು, ತೀವ್ರವಾದ ತಲೆನೋವು, ವಾಕರಿಕೆ ಮತ್ತು ವಾಂತಿ ಇತ್ಯಾದಿ ಸಮಸ್ಯೆಗಳನ್ನು ಲಘುವಾಗಿ ಪರಿಗಣಿಸಬಾರದು. ಸದ್ಯ ಮಲೇರಿಯಾ, ಡೆಂಗ್ಯೂ, ಚಿಕುನ್‌ಗುನ್ಯಾ ಕಾಯಿಲೆಗಳು ಹೆಚ್ಚಾಗಿ ಕಂಡುಬರುತ್ತಿದ್ದು ಜನತೆ ಎಚ್ಚರಿಕೆ ವಹಿಸಬೇಕು. ಜಿಲ್ಲೆಯನ್ನು ಮಲೇರಿಯಾ ಮುಕ್ತವಾಗಿಸುವಲ್ಲಿ ಆದ್ಯತೆ ನೀಡಲಾಗಿದೆ ಎಂದರು.
ಕಳೆದ ವರ್ಷ ದ.ಕ. ಜಿಲ್ಲೆಯಲ್ಲಿ 1397 ಮಲೇರಿಯಾ ಪ್ರಕರಣಗಳು ಕಂಡುಬಂದಿದ್ದವು. ಈ ವರ್ಷ ಜೂ.26ರವರೆಗೆ 277 ಪ್ರಕರಣಗಳು ಪತ್ತೆಯಾಗಿವೆ. 10 ವರ್ಷಗಳ ಹಿಂದೆ ಜಿಲ್ಲೆಯಲ್ಲಿ 16 ಸಾವಿರಕ್ಕೂ ಅಧಿಕ ಮಲೇರಿಯಾ ಪ್ರಕರಣಗಳು ಪತ್ತೆಯಾಗುತ್ತಿದ್ದವು. ಬಳಿಕ ಹೆಚ್ಚಿನ ಜಾಗೃತಿ ಕಾರ್ಯದಿಂದಾಗಿ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಆದರೆ ಜನತೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬಾರದು. ಕಳೆದ ವರ್ಷ 239 ಡೆಂಗ್ಯೂ ಪ್ರಕರಣಗಳು ಕಂಡುಬಂದಿದ್ದು, ಈ ವರ್ಷ ಇದುವರೆಗೆ 121 ಪ್ರಕರಣಗಳು ಕಂಡುಬಂದಿವೆ. ಈ ವರ್ಷ ಯಾವುದೇ ಚಿಕುನ್ ಗುನ್ಯಾ ಪ್ರಕರಣಗಳು ಪತ್ತೆಯಾಗಿಲ್ಲ. ಹೆಚ್ಚಿನ ಪ್ರಮಾಣದಲ್ಲಿ ನಗರ ವ್ಯಾಪ್ತಿಯಲ್ಲಿಯೇ ಡೆಂಗ್ಯೂ, ಮಲೇರಿಯಾ ಪ್ರಕರಣಗಳು ಕಂಡುಬರುತ್ತಿವೆ. ಮಂಗಳೂರು ನಗರದಲ್ಲಿ ಈ ವರ್ಷ 266 ಮಲೇರಿಯಾ ಪ್ರಕರಣ, 24 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ ಎಂದವರು ವಿವರಿಸಿದರು.
ಮಂಗಳೂರು ನಗರ ವ್ಯಾಪ್ತಿಯಲ್ಲಿ ಮಲೇರಿಯಾ ಪ್ರಕರಣಗಳನ್ನು ಪತ್ತೆಹಚ್ಚಲು ಮನೆ ಬಾಗಿಲಿಗೆ ತೆರಳಿ ಪರೀಕ್ಷೆ ನಡೆಸುವ ವ್ಯವಸ್ಥೆಯನ್ನು ಮಾಡಲಾಗಿದೆ. ವರದಿ ಕೂಡ ಸ್ಥಳದಲ್ಲಿಯೇ ದೊರೆಯಲಿದ್ದು, ಸೂಕ್ತ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಸಾರ್ವಜನಿಕರು ಮಲೇರಿಯಾ ಜ್ವರದ ಲಕ್ಷಣಗಳು ಕಂಡುಬಂದರೆ 9448556827 ಸಂಖ್ಯೆಗೆ ಕರೆ ಮಾಡಬಹುದು ಎಂದು ಡಾ.ನವೀನ್‌ಚಂದ್ರ ತಿಳಿಸಿದರು.
ಮಂಗಳೂರು ತಾಲೂಕು ಆರೋಗ್ಯ ಅಧಿಕಾರಿ ಡಾ.ಸುಜಯ್ ಭಂಡಾರಿ ಮಾತನಾಡಿ, ನಿಂತಿರುವ 5 ಎಂಎಲ್ ನೀರಿನಲ್ಲಿಯೂ ಸೊಳ್ಳೆಗಳು ಹುಟ್ಟುತ್ತವೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಜನ ಜಾಗೃತಿಯಿಂದ ಮಾತ್ರ ಬದಲಾವಣೆ ಸಾಧ್ಯ ಎಂದರು.
ದ.ಕ.ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.
ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.
Leave A Reply