ರಾಜ್ಯದಲ್ಲಿ ಡೆಂಗ್ಯೂ ತಡೆಗೆ ಸಿಸಿಟಿವಿ ಅಳವಡಿಕೆ! ಹೇಗಿದೆ ಪರಿಹಾರ..
ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಬಿಸಿ ಮುಟ್ಟಿಸಲು ರಾಜ್ಯ ಸರಕಾರ ತಯಾರಾಗಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದಾರೆ. ಜನರು ಸಿಕ್ಕಿದ ಕಡೆ ರಸ್ತೆ ಬದಿಯಲ್ಲಿ ತ್ಯಾಜ್ಯ ಬಿಸಾಡುವುದನ್ನು ತಪ್ಪಿಸಲು ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ವ್ಯವಸ್ಥೆ ಮಾಡಲಾಗುವುದು, ಜನರು ಮನೆಯ ಬಳಿ ಬರುವ ಕಸ ಸಂಗ್ರಹ ವಾಹನಗಳಿಗೆ ಕಸವನ್ನು ಹಾಕದೇ ರಸ್ತೆ ಬದಿ ಎಸೆಯುತ್ತಿದ್ದಾರೆ. ಈ ಕಾರಣಕ್ಕೆ ಎಲ್ ಇಡಿ ವಿದ್ಯುತ್ ದೀಪದ ಕಂಬಗಳಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣ ಏರಿಕೆಯಾಗುತ್ತಲೇ ಇದೆ. ಆರೋಗ್ಯ ಇಲಾಖೆ ಹಲವು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಸಾರ್ವಜನಿಕರ ಸಹಕಾರ ಕೋರಿದೆ. ಕಸವನ್ನು ಮನೆಬಾಗಿಲಿಗೆ ಬರುವ ತ್ಯಾಜ್ಯ ಸಂಗ್ರಹ ವಾಹನಗಳಿಗೆ ನೀಡಬೇಕು ಎನ್ನುವ ಸೂಚನೆಯನ್ನು ಅನೇಕರು ಪಾಲಿಸುತ್ತಿಲ್ಲ. ಜೊತೆಗೆ ಒಣ ಮತ್ತು ಹಸಿಕಸ ಬೇರ್ಪಡಿಸಬೇಕು ಎನ್ನುವ ಸೂಚನೆಯನ್ನು ಜನ ಕ್ಯಾರೇ ಮಾಡುತ್ತಿಲ್ಲ. ಒಂದಷ್ಟು ದಿನ ದಂಡ ವಿಧಿಸುವ ಪ್ರಕ್ರಿಯೆ ಆರಂಭವಾದರೂ, ಸಾರ್ವಜನಿಕರಿಂದ ಇದಕ್ಕೂ ಸೂಕ್ತ ಸ್ಪಂದನೆ ವ್ಯಕ್ತವಾಗದ ಹಿನ್ನಲೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ಕಸ ಬಿಸಾಕುವುದು ಬಹುತೇಕ ಕಡೆ ಹಾಗೆ ಇದೆ.
ಕಸ ಹಾಗೂ ಕಟ್ಟಡ ನಿರ್ಮಾಣ ತ್ಯಾಜ್ಯ ಸುರಿಯುವವರನ್ನು ಗುರುತಿಸಿ ಪ್ರಕರಣ ದಾಖಲಿಸುವ ಬಗ್ಗೆಯೂ ಸೂಚನೆ ನೀಡಲಾಗಿದೆ. ಡೆಂಗ್ಯೂ ನಿಯಂತ್ರಣಕ್ಕೆ ಪಾಲಿಕೆಗಳು ಹಾಗೂ ಆರೋಗ್ಯ ಇಲಾಖೆ ಜಂಟಿಯಾಗಿ ಕೆಲಸ ಮಾಡುತ್ತಿವೆ. ಎಲ್ಲಾ ಇಲಾಖೆಗಳ ಮುಖ್ಯಸ್ಥರೊಂದಿಗೆ ಮುಖ್ಯಮಂತ್ರಿಗಳು ಪ್ರತ್ಯೇಕ ಸಭೆ ನಡೆಸುತ್ತಾರೆ ಎಂದು ಡಿಸಿಎಂ ಹೇಳಿದ್ದಾರೆ.
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಂಪೂರ್ಣ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಇದುವರೆಗೂ 7362 ಪ್ರಕರಣ ಪತ್ತೆಯಾಗಿದ್ದು, ಪ್ರಸ್ತುತ 303 ಸಕ್ರಿಯ ಪ್ರಕರಣಗಳಿವೆ. 7 ಸಾವು ಸಂಭವಿಸಿದೆ. ಸೊಳ್ಳೆ ನಿಯಂತ್ರಣಕ್ಕೆ ಸೂಕ್ರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಜಿಲ್ಲಾಧಿಕಾರಿ ಹಾಗೂ ಸಿಇಒ ಸಭೆಯಲ್ಲಿ ನಿರ್ದೇಶನ ನೀಡಿದ್ದರು.
Leave A Reply