ಉಗ್ರರ ಜತೆ ನಂಟು, ಕಾಶ್ಮೀರದಲ್ಲಿ ಶಂಕಿತನ ಬಂಧನ
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿದಿದ್ದು, ಲಷ್ಕರೆ ತಯ್ಯಬಾ ಉಗ್ರ ಸಂಘಟನೆ ಜತೆ ನಂಟು ಹೊಂದಿರುವ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.
ತೌಸುಫ್ ಅಹಮ್ಮದ್ ನಯೀಮ್ ಎಂಬಾತನನ್ನು ಪುಲ್ವಾಮದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬಂಧಿಸಿದ್ದಾರೆ.
ಕಳೆದ ನವೆಂಬರ್ ನಲ್ಲಿ ಎನ್ಐಎ ಅಧಿಕಾರಿಗಳು ಔರಾಂಗಾಬಾದ್ ನಲ್ಲಿ ಎಲ್ಇಟಿ ಉಗ್ರ ಶೇಖ್ ಅಬ್ದುಲ್ಲಾ ಎಂಬಾತನನ್ನು ಬಂಧಿಸಿದ್ದು, ಆತ ನೀಡಿದ ಮಾಹಿತಿ ಆಧಾರದ ಮೇಲೆ ಶಂಕಿತನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ದೇಶದಲ್ಲಿ ಎಲ್ಇಟಿ ಉಗ್ರ ಸಂಘಟನೆಯ ಹಲವು ಚಟುವಟಿಕೆಗಳಿಗೆ ಸಹಕಾರ ನೀಡಿದ ಆರೋಪದಲ್ಲಿ 25 ವರ್ಷದ ನಯೀಮ್ ನನ್ನು ಜಮ್ಮು-ಕಾಶ್ಮೀರ ಪೊಲೀಸರ ಸಹಯೋಗದಲ್ಲಿ ಬಂಧಿಸಲಾಗಿದೆ ಎಂದು ಎನ್ಐಎ ತಿಳಿಸಿದೆ.
ಪ್ರಸ್ತುತ ಶಂಕಿತ ಉಗ್ರನನ್ನು ಪುಲ್ವಾಮಾ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ದೆಹಲಿಗೆ ಕರೆದೊಯ್ಯಲಾಗುತ್ತದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಕಳೆದ ಮೇನಿಂದ ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿ ಉಗ್ರರ ವಿರುದ್ಧ ಕಾರ್ಯಾಚರಣೆ ಕೈಗೊಳ್ಳುತ್ತಿದ್ದು, ಪ್ರಸಕ್ತ ವರ್ಷದಲ್ಲಿ 203 ಉಗ್ರರನ್ನು ಹತ್ಯೆ ಮಾಡಲಾಗಿದೆ.
Leave A Reply